ಬೆಳಗಾವಿಯಲ್ಲಿ 10 ದಿನಗಳ ಕಾಲ ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದ ಗಣೇಶೋತ್ಸವಕ್ಕೆ ತೆರೆ ಬಿದ್ದಿದೆ.
ಬೆಳಗಾವಿ: ಬೆಳಗಾವಿಯಲ್ಲಿ 10 ದಿನಗಳ ಕಾಲ ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದ ಗಣೇಶೋತ್ಸವಕ್ಕೆ ತೆರೆ ಬಿದ್ದಿದೆ. ಇಂದು ಸಾರ್ವಜನಿಕ ಗಣೇಶ ಮಂಡಳಿಗಳ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ.
ನಗರದ ಕಿರ್ಲೋಸ್ಕರ್ ರಸ್ತೆಯಲ್ಲಿರುವ ಹುತಾತ್ಮ ಚೌಕ್ ನಲ್ಲಿ ಮೆರವಣಿಗೆಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್ ಹಾಗೂ ಉತ್ತರ ಶಾಸಕ ಆಸೀಫ್ ಸೇಠ್ ಪೂಜೆ ಸಲ್ಲಿಸಿ, ಡೊಳ್ಳು ಬಾರಿಸಿ ಚಾಲನೆ ನೀಡಿದರು. ಇದೇ ವೇಳೆ ಟ್ರಾಕ್ಟರ್ ಚಾಲನೆ ಮಾಡಿದ ಅಭಯ ಪಾಟೀಲ್ ಗಮನ ಸೆಳೆದರು. ಸಂಸದೆ ಮಂಗಲ್ ಅಂಗಡಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ್, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ,
ನಗರ ಪೊಲೀಸ್ ಆಯುಕ್ತ ಎಸ್.ಎನ್. ಸಿದ್ರಾಮಪ್ಪ ಸೇರಿದಂತೆ ಹಲವು ಅಧಿಕಾರಿಗಳು, ಗಣ್ಯರು, ಮಂಡಳಿಯವರು ಪಾಲ್ಗೊಂಡಿದ್ದರು.

ಕಿರ್ಲೋಸ್ಕರ್ ರಸ್ತೆಯಿಂದ ಆರಂಭವಾದ ಮೆರವಣಿಗೆಯು ಮಾರುತಿ ಗಲ್ಲಿ, ಸಮಾದೇವಿ ಗಲ್ಲಿ, ಧರ್ಮವೀರ ಸಂಭಾಜಿ ವೃತ್ತ, ಶನಿ ಮಂದಿರ ಮಾರ್ಗವಾಗಿ ಕಪಿಲೇಶ್ವರ ಮಂದಿರದ ಹೊಂಡದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ.
ನಗರದಲ್ಲಿ 378 ಸಾರ್ವಜನಿಕ ಗಣೇಶ ಮಂಡಳಿಗಳು ಇದ್ದು, ಇಂದು ಸಂಜೆ ಶುರುವಾದ ಗಣೇಶ ಮೂರ್ತಿಗಳ ವಿಸರ್ಜನೆ ನಾಳೆ ಬೆಳಗಿನವರೆಗೆ ನಡೆಯಲಿದೆ. ಭದ್ರತೆಗಾಗಿ 3 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.